ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದೊಂದಿಗೆ ಆಚರಿಸಲು ಎಲ್ಲೆಡೆ ಸಕಲ ಸಿದ್ದತೆಗಳು ನಡೆದಿವೆ. ಇನ್ನು ಕನ್ನಡ ರಾಜ್ಯೋತ್ಸವಕ್ಕೆ ಹಲವೆಡೆ ವಿವಿಧ ಕಾರ್ಯಕ್ರಮ ಮತ್ತು ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತದೆ. ಈ ಸ್ಪರ್ಧೆಗಳಲ್ಲಿ ಪ್ರಬಂಧ ಸ್ಪರ್ಧೆಯೂ ಒಂದು.
Kannada Rajyotsava Essay
ಕನ್ನಡ ರಾಜ್ಯೋತ್ಸವವು ಕರ್ನಾಟಕ ಎಂದು ನಾಮಕರಣ ಮಾಡಿದ ದಿನದ ಆಚರಣೆ. ಇದು ಅಲ್ಲಲ್ಲಿ ಚದುರಿದ್ದ ಕನ್ನಡವನ್ನೆಲ್ಲ ಒಂದು ಗೂಡಿಸಿ ಅದಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ದಿನ. ಈಗಿನ ಕರ್ನಾಟಕ ಮೊದಲಿಗೆ ಮೈಸೂರು ಹೆಸರಿನಿಂದ ಗುರುತಿಸಿಕೊಂಡಿತ್ತು. ಕರ್ನಾಟಕ ಏಕೀಕರಣ ಚಳುವಳಿಯನ್ನು1905ರಲ್ಲಿ ಪ್ರಾರಂಭಿಸಿದರು. 1950ರಲ್ಲಿ, ಭಾರತವು ಗಣರಾಜ್ಯವಾದ ನಂತರ ಭಾರತದ ವಿವಿಧ ಪ್ರಾಂತ್ಯಗಳು, ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರೂಪು ಗೊಂಡವು. ಈ ಹಿಂದೆ ರಾಜರ ಆಳ್ವಿಕೆಯಲ್ಲಿ ದಕ್ಷಿಣ ಭಾರತದಲ್ಲಿ ಹಲವಾರು ಸಂಸ್ಥಾನಗಳನ್ನು ಒಳಗೊಂಡಂತೆ ರಾಜ್ಯಗಳು ರೂಪುಗೊಂಡಿದ್ದವು. ಕನ್ನಡ ಮಾತನಾಡುವ ಪ್ರಾಂತ್ಯಗಳು ಸೇರಿ, ಮೈಸೂರು ರಾಜ್ಯವು ಉದಯವಾಯಿತು.
1956 ರ ನವೆಂಬರ್ 1 ರಂದು, ಮದ್ರಾಸ್, ಬಾಂಬೆ, ಹೈದರಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯವಾಯಿತು ಹಾಗೂ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪು ಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು. ಹೊಸದಾಗಿ ಏಕೀಕೃತಗೊಂಡ ರಾಜ್ಯದ ಆರಂಭದಲ್ಲಿ ಹೊಸ ಘಟಕದ ಕೋರ್ ರೂಪುಗೊಂಡು ಮುಂಚಿನ ರಾಜ್ಯದ ಹೆಸರು ಇರಲೆಂದು “ಮೈಸೂರು” ಹೆಸರನ್ನು ಉಳಿಸಿಕೊಂಡರು.
ಕರ್ನಾಟಕ ರಾಜ್ಯ ರೂಪುಗೊಂಡಾಗ ಒಟ್ಟು 19 ಜಿಲ್ಲೆಗಳನ್ನು ಒಳಗೊಂಡಿತ್ತು. ಅಂದಿನಿಂದ ನವೆಂಬರ್ 1 ನ್ನು ಕನ್ನಡ ರಾಜ್ಯೋತ್ಸವ / ಕರ್ನಾಟಕ ರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ.
ಕರ್ನಾಟಕ ಹೆಸರು
ಕರ್ನಾಟಕ ಪದದ ಮೂಲದ ಬಗ್ಗೆ ಹಲವು ಅಭಿಪ್ರಾಯಗಳಿದ್ದರೂ ಸಾಮಾನ್ಯವಾಗಿ “ಕರು” ಮತ್ತು “ನಾಡು” ಸೇರಿ “ಎತ್ತರದ ಭೂಮಿ” ಎಂಬರ್ಥದ ಕರುನಾಡು ಪದದಿಂದ ಉಗಮವಾಗಿದೆ ಎನ್ನಲಾಗಿದೆ. ಕರು ಎಂದರೆ ಕಪ್ಪು, ನಾಡು ಎಂದರೆ ಪ್ರದೇಶ ಎಂದು ಅರ್ಥೈಸಿಕೊಂಡರೆ ಬಯಲು ಸೀಮೆಯ ಕಂಡು ಕಪ್ಪು ಹತ್ತಿ ಮಣ್ಣಿನಿಂದಾಗಿ ಹೆಸರು ಬಂದಿದೆ ಎಂದೂ ಹೇಳಲಾಗುತ್ತದೆ. ಕೃಷ್ಣಾ ನದಿಯ ದಕ್ಷಿಣಕ್ಕೆ ಎರಡೂ ಕಡೆ ಜಲಾವೃತವಾದ ಪ್ರದೇಶವಾಗಿರುವುದರಿಂದ ಬ್ರಿಟೀಷರ ಕಾಲದಲ್ಲಿ ಕಾರ್ನಾಟಿಕ್ ಅಥವಾ ಕರ್ನಾಟಕ ಹೆಸರು ಬಳಕೆಗೆ ಬಂತು.
ಕನ್ನಡ ಬಾವುಟ
ಕರ್ನಾಟಕಕ್ಕೆ ತನ್ನದೇ ಆದ ಪ್ರತ್ಯೇಕ ಭಾವುಟವಿದೆ. ಕನ್ನಡಕ್ಕೊಂದು ಭಾವುಟ ಅವಶ್ಯಕತೆಯನ್ನುಅರಿತ ಕನ್ನಡದ ಹೋರಾಟಗಾರರಾದ ಎಂ ರಾಮಮೂರ್ತಿಗಳು ಹಳದಿ ಹಾಗೂ ಕೆಂಪು ಬಣ್ಣ ಬಳಸಿ ಬಾವುಟವನ್ನು ಸಿದ್ದಪಡಿಸಿದರು. ಮೂಲತಃ ಹಳದಿ ಬಣ್ಣವು ಕನ್ನಡಾಂಬೇಯ ಆರಿಶಿನ ಮತ್ತು ಕುಂಕುಮವನ್ನು ಸೂಚಿಸುತ್ತದೆ ಹಾಗೂ ಹಳದಿ ಬಣ್ಣವು ಶಾಂತಿ, ಸೌಹಾರ್ದತೆ ಸೂಚಿಸಿದರೆ ಕೆಂಪು ಬಣ್ಣ ಕ್ರಾಂತಿಯ ಸಂದೇಶ ನೀಡುತ್ತದೆ.
ಆರಂಭದಲ್ಲಿ ಕನ್ನಡ ಬಾವುಟ ಸಿದ್ಧಗೊಂಡಾಗ ಬಾವುಟದ ಮಧ್ಯೆ ಕರ್ನಾಟಕದ ಭೂಪಟ ಮತ್ತು ಅದರ ನಡುವಿನಲ್ಲಿ ಏಳು ಕವಲುಗಳುಳ್ಳ ತೆನೆಯ ಚಿತ್ರವಿತ್ತು. ಮುದ್ರಿಸಲು ಸ್ವಲ್ಪ ಕಷ್ಟವಾಗುತ್ತಿದ್ದರಿಂದ ಅದನ್ನು ತೆಗೆದು ಕೇವಲ ಹಳದಿ ಮತ್ತು ಕೆಂಪು ಬಣ್ಣವನ್ನು ಮಾತ್ರ ಉಳಿಸಿಕೊಳ್ಳಲಾಯಿತು.
ಕನ್ನಡ ರಾಜ್ಯೋತ್ಸವ ಆಚರಣೆ
ರಾಜ್ಯೋತ್ಸವವನ್ನು ಕರ್ನಾಟಕದಲ್ಲಿರುವ ಬಹುತೇಕ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಧರ್ಮಬೇಧವಿಲ್ಲದೆ ಆಚರಿಸುತ್ತಾರೆ. ಸಾಮಾನ್ಯ ವ್ಯಕ್ತಿಗಳು ಕೂಡ ತಮ್ಮ ವಾಹನಗಳಿಗೆ ಕನ್ನಡ ಭಾವುಟವನ್ನು ಅಲಂಕರಿಸುವ ಮೂಲಕ ಆಚರಿಸುತ್ತಾರೆ. ರಾಜ್ಯ ಸರ್ಕಾರ ಕರ್ನಾಟಕ ರಾಜ್ಯೋತ್ಸವದ ದಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರಶಸ್ತಿ ಪ್ರಕಟ ಪಡಿಸಲಾಗುತ್ತದೆ. ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಶ್ವದಾದ್ಯಂತ ಹಮ್ಮಿಕೊಳ್ಳಲಾಗುತ್ತದೆ.ರಾಜ್ಯದ ಮುಖ್ಯಮಂತ್ರಿ ಸಾಧಕರಿಗೆ ಈ ಪ್ರಶಸ್ತಿಯನ್ನು ವಿತರಿಸುತ್ತಾರೆ. ಕರ್ನಾಟಕದಲ್ಲಿನ ಇನ್ನಿತರ ಪ್ರದೇಶಗಳಾದ ಮುಂಬಯಿ, ದೆಹಲಿ ಮುಂತಾದ ಕಡೆಯು ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುತ್ತದೆ. ಇದಲ್ಲದೆ ಸಾಗರೋತ್ತರದಲ್ಲಿ ಕನ್ನಡ ಸಂಸ್ಥೆ, ಅಮೇರಿಕಾದ, ಸಿಂಗಾಪುರ್, ದುಬೈ , ಮಸ್ಕಟ್, ದಕ್ಷಿಣ ಕೊರಿಯಾ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ಮೊದಲಾದ ಕಡೆಗಳಲ್ಲಿ ನೆಲೆಸಿರುವ ಕನ್ನಡಿಗರು ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತಾರೆ.
ಇನ್ನು ರಾಜ್ಯೋತ್ಸವ ಆಚರಣೆಯಲ್ಲಿ ನಮ್ಮ ನಿಮ್ಮೆಲ್ಲರ ಪಾತ್ರ ಹೆಚ್ಚು ಮಹತ್ವದ್ದಾಗಿದೆ. ನಾಡು, ನುಡಿ ಮತ್ತು ಇಲ್ಲಿನ ಸಂಪತ್ತನ್ನು ಕಾಪಾಡಿಕೊಂಡು ಮುಂದಿನ ಪೀಳಿಗೆಗೆ ಉಳಿಸಿಕೊಂಡು ಹೋಗುವುದು ಕೂಡ ನಮ್ಮ ನಿಮ್ಮ ಜವಾಬ್ದಾರಿಯಾಗಿದೆ. ಇದ್ಯಾವುದಕ್ಕೂ ಧಕ್ಕೆ ಬಾರದಂತೆ ನಡೆಯುವುದು ಕೂಡ ನಮ್ಮ ಕರ್ತವ್ಯವಾಗಿದೆ.